ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಖಾಸಗಿ ಶಾಲೆಯ ನೂತನ ಕಟ್ಟಡಕವೊಂದಕ್ಕೆ ಅಗ್ನಿಶಾಮಕ ಇಲಾಖೆಯ ನಿರಾಕ್ಷೇಪಣಾ ಪ್ರಮಾಣಪತ್ರ (NOC) ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಅಗ್ನಿಶಾಮಕ ಅಧಿಕಾರಿ ಲೋಕಾ ಬಲೆಗೆ
ಶಿಕಾರಿಪುರ ಪಟ್ಟಣದ ಖಾಸಗಿ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯ ಎನ್ಒಸಿ ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು. ಎನ್ಒಸಿ ನೀಡಲು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಶಿಕಾರಿಪುರದ ಅನೂಪ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಅನೂಪ್ ಅವರ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆಗೆ ಯೋಜನೆ ರೂಪಿಸಿದ್ದರು. ದೂರುದಾರರಿಂದ ₹1 ಲಕ್ಷ ಹಣವನ್ನು ಅಶೋಕ್ ಕುಮಾರ್ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಅವರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ಆ್ಯಂಟನಿ ಜಾನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇನ್ಸ್ಪೆಕ್ಟರ್ಗಳಾದ ವೀರಬಸಪ್ಪ, ರುದ್ರೇಶ್ ಹಾಗೂ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ವಶಕ್ಕೆ ಪಡೆದಿರುವ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
