ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ ಸುದ್ದಿ / ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ವಿರೋಧಿಸಿದ ಬಾಲಕಿಯ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್ಸಿ-1) ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಏನಿದು ಕೇಸ್
ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಒತ್ತಾಯಿಸಿ ಮೊದಲನೇ ಆರೋಪಿಯು ಲೈಂಗಿಕ ಕಿರುಕುಳ ನೀಡಿದ್ದ. ಇದನ್ನು ಬಾಲಕಿಯ ತಂದೆ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಮೊದಲನೇ ಆರೋಪಿಯು ಮತ್ತೊಬ್ಬನೊಂದಿಗೆ ಸೇರಿ ಬಾಲಕಿಯ ತಂದೆಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಠಾಣೆ ಒಂದರಲ್ಲಿ ಪೋಕ್ಸೋ ಕಾಯ್ದೆ ಹಾಗೂ ಕೊಲೆಗೆ ಯತ್ನದಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪಿಎಸ್ಐ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ (ಎಫ್ಟಿಎಸ್ಸಿ-1) ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯದಲ್ಲಿ ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಶಿಕ್ಷೆ ಪ್ರಕಟಿಸಿದ್ದಾರೆ.
- ಮೊದಲನೇ ಅಪರಾಧಿಗೆ ಐಪಿಸಿ ಕಲಂ 354(ಎ), 448, 307 ಸಹಿತ 34 ಹಾಗೂ ಪೋಕ್ಸೋ ಕಾಯ್ದೆಯ ಕಲಂ 8ರ ಅಡಿಯಲ್ಲಿ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1,21,000 ದಂಡ ವಿಧಿಸಲಾಗಿದೆ.
- ಎರಡನೇ ಅಪರಾಧಿಗೆ ಐಪಿಸಿ ಕಲಂ 448, 307 ಸಹಿತ 34ರ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹41,000 ದಂಡ ವಿಧಿಸಲಾಗಿದೆ.
- ಇದೇ ವೇಳೆ ಸಂತ್ರಸ್ತ ಬಾಲಕಿಗೆ ಅಪರಾಧಿಗಳ ದಂಡದ ಮೊತ್ತದಲ್ಲಿ ₹1 ಲಕ್ಷ ಹಾಗೂ ಸರ್ಕಾರದ ವತಿಯಿಂದ ₹10 ಸಾವಿರ ಸೇರಿದಂತೆ ಒಟ್ಟು ₹1.10 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
