ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪೋಕ್ಸೋ (POCSO) ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಅವರಿಗೆ ನೀಡಿದ್ದ ಸಮನ್ಸ್ಗೆ ಸರ್ವೋಚ್ಚ ನ್ಯಾಯಾಲಯವು ಇದೀಗ ತಡೆ ನೀಡಿರುವುದರಿಂದ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಪೋಕ್ಸೋ ಪ್ರಕರಣದಲ್ಲಿ ತನಿಖೆ ಉದ್ದೇಶದಿಂದ ತಮ್ಮ ವಿರುದ್ಧ ಹೊರಡಿಸಲಾಗಿದ್ದ ಸಮನ್ಸ್ ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಯಡಿಯೂರಪ್ಪ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಹೈಕೋರ್ಟ್ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಈ ಅರ್ಜಿಯನ್ನು ಪರಿಗಣಿಸಲಿಲ್ಲ ಎಂದು ವಾದಿಸಿದರು. ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್, ಇದೀಗ ಪೋಕ್ಸೋ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆಯನ್ನು ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ಸ್ವಲ್ಪ ಮಟ್ಟಿನ ನಿರಾಳತೆಯನ್ನು ಒದಗಿಸಿದೆ.
Supreme Court ಪ್ರಕರಣದ ಹಿನ್ನೆಲೆ ಏನು
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪವಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ 17 ವರ್ಷದ ಬಾಲಕಿ ತನ್ನ ತಾಯಿಯೊಂದಿಗೆ ಸಮಸ್ಯೆ ಪರಿಹಾರಕ್ಕಾಗಿ ಸಹಾಯ ಕೇಳಲು ಬಂದಿದ್ದಳು. ಈ ಸಂದರ್ಭದಲ್ಲಿ ಬಿ.ಎಸ್.ವೈ ಅವರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 2024 ರಲ್ಲಿ ದೂರು ನೀಡಿದ್ದರು. ಆ ದೂರಿನ ಅನ್ವಯ, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಪ್ರಕರಣದ ಗಂಭೀರ ಸ್ವರೂಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತನಿಖೆ ನಡೆಸಿ, ಸಾಕ್ಷ್ಯ ನಾಶ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ ಆರೋಪದ ಅಡಿಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರು ಸೇರಿದಂತೆ ನಾಲ್ವರ ವಿರುದ್ಧ 750 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
Supreme Court provides temporary relief bsy


