ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಬೈಕ್ ಸವಾರರ ಸಾವು

ಹಂಚಿಕೊಳ್ಳಿ
WhatsApp Facebook X Telegram
malenadutoday image
malenadutoday image

ಸುದ್ದಿಯ ಸ್ಥಳ: Chikkamagaluru, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಸಂಭವಿಸಿದ 3 ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಉದ್ದೇಬೋರನಹಳ್ಳಿ ಸಮೀಪ ಭಾನುವಾರ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಕಡೂರಿನ ವಿಷ್ಣು (21) ಮೃತಪಟ್ಟಿದ್ದಾರೆ. ಸ್ನೇಹಿತನ ಮನೆಯ ಗೃಹಪ್ರವೇಶಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದ ವಿಷ್ಣು, ಕಡೂರಿಗೆ ವಾಪಸಾಗುತ್ತಿದ್ದಾಗ ಜಲಜೀವನ್ ಮಿಷನ್ ಗೋದಾಮಿನ ಸಮೀಪ ಅಪಘಾತ ಸಂಭವಿಸಿದೆ. ಮುಂದೆ ಸಾಗುತ್ತಿದ್ದ ಲಾರಿಯ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ. ವಿಷ್ಣು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ತಂದೆ ನೀಡಿದ ದೂರಿನನ್ವಯ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಹೆಬ್ಬೋಡಿ ಬಳಿ ಸೋಮವಾರ ರಾತ್ರಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಶಿರಾಳಗಿ ಗ್ರಾಮದ ಗಣೇಶ್ (23) ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಗೆ ಬಂದಿದ್ದ ಗಣೇಶ್, ಆಡೂರಿನಿಂದ ಆನಂದಪುರದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಆನಂದಪುರ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಅಜ್ಜಂಪುರ ತಾಲೂಕಿನ ಹಡಗಲು–ತಿಮ್ಮಾಪುರ ನಡುವಿನ ಸ್ಮಶಾನದ ಸಮೀಪ ಟಾಟಾ ಏಸ್ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿಯಾಗಿ ಪ್ರಸನ್ನಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಆಶಾ ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದಿಂದ ದಂಪತಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಎದುರಿನಿಂದ ಬಂದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಪ್ರಸನ್ನಕುಮಾರ್ ಅವರ ತಲೆ, ಕೈ ಹಾಗೂ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದವು. ಗಾಯಾಳು ಆಶಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor