ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಭಾರತೀಯ ಸೇನೆಯಲ್ಲಿ ಸೈನಿಕರನ್ನು ಯಾವುದೇ ಜಾತಿ ಧರ್ಮದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳುವುದಿಲ್ಲ, ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಧರ್ಮದ ಓಲೈಕೆಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ನವೆಂಬರ್ 2ರಂದು ಸೇನಾ ತರಬೇತಿ ಶಿಬಿರವನ್ನು ಟೆಂಡರ್ ಮುಖಾಂತರ ನಡೆಸಲು ಮುಂದಾಗಿದ್ದು, ಅದಕ್ಕೆ ನಮ್ಮ ವಿರೋಧವಿದೆ ಎಂದು ವಿಶ್ವ ಹಿಂದೂ ಪರಿಷತ್ನ ಪ್ರಮುಖರಾದ ರಾಜೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ನಿರ್ದೇಶನಾಲಯವು ಸೇನಾ ತರಬೇತಿ ಶಿಬಿರವನ್ನು ಟೆಂಡರ್ ಮೂಲಕ ಆಯೋಜಿಸುತ್ತಿದ್ದು, ಇದಕ್ಕೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆಯ ಬಳಿ ಅನುಮತಿ ಪಡೆದುಕೊಂಡಿಲ್ಲ ಎಂದು ದೂರಿದರು. ಭಾರತೀಯ ಸೇನೆಯಲ್ಲಿ ಯಾವುದೇ ಧರ್ಮ ಭೇದಭಾವವಿಲ್ಲ, ಆದರೆ ಕಾಂಗ್ರೆಸ್ ಸರ್ಕಾರ ಸೇನೆಯನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸುವ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದೆ. ಈ ತರಬೇತಿ ಶಿಬಿರವನ್ನು ತಕ್ಷಣವೇ ರದ್ದು ಮಾಡಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯ ಸರ್ಕಾರಕ್ಕೆ ಸೇನಾ ತರಬೇತಿ ನೀಡಲೇಬೇಕೆಂಬ ಉದ್ದೇಶವಿದ್ದರೆ, ಎನ್ಸಿಸಿ (NCC) ಮುಖೇನ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿ. ಅದನ್ನು ಬಿಟ್ಟು ಕೇವಲ ಒಂದು ಸಮುದಾಯದ ಓಲೈಕೆಗಾಗಿ ಈ ರೀತಿ ಮಾಡಬಾರದು. ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ರಾಜೇಶ್ ಗೌಡ ಎಚ್ಚರಿಕೆ ನೀಡಿದರು.
