Heatwave Alert / ಮಳೆ ನಿಂತು ಹೋದ ಮಳೆಗಾಲದಲ್ಲಿ ಸದ್ಯ ಬಿಸಿಗಾಳಿಯ ಅಬ್ಬರ ಶುರುವಾಗಲಿದೆಯಂತೆ. ಹೀಗಂತ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೇ ಗುರುವಾರದಿಂದ ಭಾನುವಾರದ ವರೆಗೆ ಬಿಸಿಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ನೈರುತ್ಯ ಮುಂಗಾರು ದುರ್ಬಲವಾ ಪರಿಣಾಮ, ರಾಜ್ಯದಲ್ಲಿ ತಾಪಮಾನ ಏರುಮುಖ ಮಾಡಿದೆ. ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಗರಿಷ್ಠ ಉಷ್ಣಾಂಶ 3ರಿಂದ 5 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಇಂದು ಗುರುವಾರ, ಬಿಸಿಗಾಳಿಯ ಸಲುವಾಗಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚುವ ಸಾಧ್ಯತೆ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚು ವರದಿಯಾಗುತ್ತಿದ್ದು, ಮುಂದಿನ ಒಂದು ವಾರ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕೆಲವೆಡೆ ಮಾತ್ರ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
