ಶಿವಮೊಗ್ಗ: ಬಾಕಿ ಪಿಂಚಣಿ ಬಿಡುಗಡೆ ಹಾಗೂ ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

ಹಂಚಿಕೊಳ್ಳಿ
WhatsApp Facebook X Telegram
Workers Demand Pending Pension and New BPL Cards
Workers Demand Pending Pension and New BPL Cards

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಬಾಕಿ ಪಿಂಚಣಿ ಬಿಡುಗಡೆ, ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ ಹಾಗೂ ಪಡಿತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಶಿವಮೊಗ್ಗ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕಳೆದ ಎಂಟು ತಿಂಗಳಿಂದ ವಿಧವಾ ವೇತನ, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲರ ಮಾಸಿಕ ಪಿಂಚಣಿ ಬಿಡುಗಡೆಯಾಗಿಲ್ಲ. ಪಿಂಚಣಿಯನ್ನೇ ಅವಲಂಬಿಸಿರುವ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರು ಜೀವನ ನಿರ್ವಹಣೆಗೆ ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಿಸಿದ ಕಚೇರಿಗಳಿಗೆ ಹಲವು ಬಾರಿ ಅಲೆದಾಡಿದರೂ ಪ್ರಯೋಜನವಾಗಿಲ್ಲ. ಕೂಡಲೇ ಬಾಕಿ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಳೆದ ಮೂರು–ನಾಲ್ಕು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್‌ಗಳ ವಿತರಣೆ ಸ್ಥಗಿತಗೊಂಡಿದೆ. ಇದರಿಂದ ಬಡ ಕುಟುಂಬಗಳಿಗೆ ಆಸ್ಪತ್ರೆ ಚಿಕಿತ್ಸೆ ಹಾಗೂ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಅರ್ಹ ಕುಟುಂಬಗಳಿಂದ ಹೊಸ ಅರ್ಜಿಗಳನ್ನು ಸ್ವೀಕರಿಸಿ ಕೂಡಲೇ ಪಡಿತರ ಚೀಟಿ ವಿತರಿಸಬೇಕು ಎಂದು ಆಗ್ರಹಿಸಿದರು.

ಬಿಪಿಎಲ್ ಕಾರ್ಡ್ ಹೊಂದಿರುವವರಿಗೂ ಪಡಿತರ ಅಕ್ಕಿ ಸಮರ್ಪಕವಾಗಿ ದೊರೆಯುತ್ತಿಲ್ಲ. ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಎರಡು–ಮೂರು ದಿನಗಳ ಕೂಲಿ ಬಿಟ್ಟು ಬಂದರೂ ಪಡಿತರ ಸಿಗುತ್ತಿಲ್ಲ. ಹೆಬ್ಬೆಟ್ಟಿನ ಗುರುತು ನೀಡಲು ಸಾಧ್ಯವಾಗದವರಿಗೂ ಪಡಿತರ ನಿರಾಕರಿಸಲಾಗುತ್ತಿದೆ. ಸರ್ವರ್ ಸಮಸ್ಯೆ ಎದುರಾದಾಗ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪಡಿತರ ವಿತರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸಮಸ್ಯೆಗಳನ್ನು ಶೀಘ್ರ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಒಕ್ಕೂಟದ ಪದಾಧಿಕಾರಿಗಳು ಎಚ್ಚರಿಸಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor